HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಕೃಷಿ ಉತ್ಪಾದನೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ: ಸಿದ್ದರಾಮಯ್ಯ ಆಕ್ರೋಶ

ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಿದರು.
06:55 PM Nov 29, 2024 IST | ಅಮೃತ ಮೈಸೂರು
Advertisement

ನವದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕಡಿತಗೊಳಿಸಿರುವುದರಿಂದ ರೈತರು ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisement

ದೆಹಲಿಯಲ್ಲಿ ಪ್ರಧಾನಿ‌‌ ಮೋದಿ ಅವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆಯಲ್ಲವೆ ಎಂಬ ವರದಿಗಾರರ ಪ್ರಶ್ನೆಗೆ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ ಎಂದು ಉತ್ತರಿಸಿದರು.

ನಬಾರ್ಡ್ ಶೇ.4.5 ರಷ್ಟು ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು.ಈ 4.5 ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದು ತಿಳಿಸಿದರು.

15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ ರಾಜ್ಯಕ್ಕೆ 11000 ಕೋಟಿ ರೂ ನಷ್ಟವಾಗಿದ್ದು ಅದನ್ನು ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ, ಈ ಬಾರಿ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟುಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಸಿಎಂ ಕಾರವಾಗಿ ಪ್ರಶ್ನಿಸಿದರು.

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯಾಗಲಿದೆಯೆ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ,ಇದಕ್ಕೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ, ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ,ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ, ಕೆಪಿಸಿಸಿ ಅಧ್ಯಕ್ಷರು ಮತ್ತು ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement
Tags :
CM SiddaramaiahNavadehaliPM Modi
Advertisement
Next Article